ಬೆಂಗಳೂರು: KPSC ಗೆಜೆಟೆಡ್ ಪ್ರೊಬೆಷನರಿ (KAS) ಪರೀಕ್ಷೆಯನ್ನು ಇನ್ನೆರಡು ತಿಂಗಳ ಒಳಗೆ ಮರು ಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಕೆಪಿಎಸ್ ಸಿಗೆ ಸೂಚಿಸಿದ್ದಾರೆ.
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂದು ಕನ್ನಡದ ಅಭ್ಯರ್ಥಿಗಳು ಆರೋಪಿಸಿದ್ದರು. ಅಲ್ಲದೆ ಇಂಗ್ಲಿಷ್ ನಿಂದ ತುರ್ಜುಮೆ ಮಾಡಿ ಕನ್ನಡಕ್ಕೆ ಹಾಕಿದ್ದಾರೆಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿದ್ದು, ತಕ್ಷಣ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಸಂಬಂಧ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೆಪಿಎಸ್ ಸಿ ಮರು ಪರೀಕ್ಷೆ ಸಂಬಂಧ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದಿದ್ದಾರೆ.