ಮುಡಾ ಹಗರಣ: ‘ವೈಟ್ನರ್‌’ ಹಿಂದಿರುವ ಅಸಲಿ ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ; ಕೋರ್ಟ್‌ಗೆ ಏಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದ HDK

ಬೆಂಗಳೂರು: ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಇಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ – ಜೆಡಿಎಸ್ ನಾಯಕರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ.

“ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು” ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ. ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೋರ್ಟ್ ಗೆ ಏಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಹೆಚ್ ಡಿ ಕುಮಾರಸ್ವಾಮಿ:

ಇದಕ್ಕೆ ಪ್ರತಿಕ್ರಿಯಿಸಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಕೆಲವು ಪ್ರಶ್ನೆಗಳನ್ನು ಹಾಕಿದ್ದಾರೆ, ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ.

•ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ.

•ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು?

•ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು?

•ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ?

•ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ?

•ನನ್ನ ಪ್ರಶ್ನೆ; ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ.

•ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ?

•ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ..

•ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ.

Leave a Reply

Your email address will not be published. Required fields are marked *