ಸ್ಯಾಂಡಲ್ ವುಡ್ ನ ಖ್ಯಾತ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಟ, ನಿರ್ದೇಶಕ ಗುರುಪ್ರಸಾದ್‌ (52) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನ ತಮ್ಮ ನಿವಾಸದಲ್ಲಿ ವಾರದ ಹಿಂದೆಯೇ ನಿರ್ದೇಶಕ ಗುರುಪ್ರಸಾದ್ ಅವರು ನೇಣಿಗೆ ಶರಣಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಗುರುಪ್ರಸಾದ್ ನಿರ್ದೇಶಿಸಿದ್ದ, ನವರಸನಾಯಕ ಜಗ್ಗೇಶ್ ಅಭಿನಯದ ಮಠ ಸಿನಿಮಾ ಭಾರಿ ಜನಪ್ರಿಯತೆ ಪಡೆದುಕೊಂಡಿತ್ತು. 2009 ರಲ್ಲಿ ಇದೇ ಜೋಡಿ ಎದ್ದೇಳು ಮಂಜುನಾಥ ಚಿತ್ರದ ಮೂಲಕ ಮತ್ತೊಂದು ಸಮಾಜಿಕ ಚಿತ್ರ ನೀಡಿತು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ ಡೈರೆಕ್ಟರ್ ಸ್ಪೇಷಲ್, ಎರಡನೇ ಸಲ ಚಿತ್ರಗಳನ್ನು ನಿರ್ದೇಶಿಸಿದರು.

ನಿರ್ದೇಶಕ ಮಾತ್ರವಲ್ಲದೇ ನಟನಾಗಿ ಮಠ, ಎದ್ದೇಳು ಮಂಜುನಾಥ, ಮೈಲಾರಿ, ಹುಡುಗರು, ಅನಂತು v/s ನುಸ್ರತ್  ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್‌ಬಾಸ್ ಅವತರಣಿಕೆಯಲ್ಲಿ ಭಾಗವಹಿಸಿದ್ದ ಇವರು ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ.

ಹಲವಾರು ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದ ಗುರುಪ್ರಸಾದ್, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗುರುಪ್ರಸಾದ್ ಇತ್ತೀಚೆಗೆ ಎರಡನೇ ವಿವಾಹವಾಗಿದ್ದರು. ವಿವಾಹದ ಬಳಿಕ ಮಾದನಾಯಕನಹಳ್ಳಿ ಬಳಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *